FACT CHECK | 2022ರಲ್ಲಿ ಪ್ರಿಯಾಂಕಾ ಗಾಂಧಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವಿಡಿಯೋವನ್ನು ತಪ್ಪಾಗಿ ಹಂಚಿಕೆ

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕಪ್ಪು ಉಡುಪಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇವರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಏಪ್ರಿಲ್ 6, 2025 ರಂದು ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಕಾಂಗ್ರೆಸ್ ಪಕ್ಷ ವಕ್ಫ್ ಸಂಶೋಧನೆ ಬಿಲ್ ವಿರುದ್ಧ ಸಂಸತ್ ನಿಂದ ರೋಡ್ ಮೇಲೆ ವಿರೋಧ ಪ್ರದರ್ಶನ ಮಾಡುತ್ತಿದೆ ಪ್ರಿಯಾಂಕಾ ಗಾಂಧಿಯವರು ಕೂಡ ವಿರೋಧ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ’’ ಎಂದು ಬರೆದುಕೊಂಡಿದ್ದಾರೆ. (Archive) ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟಿಸಿದರೆ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು,  ಕೀ-ಫ್ರೇಮ್​ಗಳನ್ನು ಬಳಸಿಕೊಂಡು ಗೂಗಲ್ ಲೆನ್ಸ್ ಸಹಾಯದಿಂದ ಸರ್ಚ್ ಮಾಡಿದಾಗ, ಆಗಸ್ಟ್ 05, 2022 ರಂದು ಪ್ರಕಟವಾದ NDTV ಯ ವೀಡಿಯೊ ವರದಿ ಲಭ್ಯವಾಗಿದೆ. ಇದು ವೈರಲ್ ಕ್ಲಿಪ್‌ನಲ್ಲಿ ಕಂಡುಬರುವ ಅದೇ ದೃಶ್ಯಗಳನ್ನು ಒಳಗೊಂಡಿದೆ. ಇದಕ್ಕೆ ‘‘ಪ್ರಿಯಾಂಕ ಗಾಂಧಿ  ಪ್ರತಿಭಟನೆ ಸಂದರ್ಭ ರಸ್ತೆಯಲ್ಲಿ ಕುಳಿತಿದ್ದಾರೆ, ಪೊಲೀಸರು ಅವರನ್ನು ಸುತ್ತುವರೆದರು’’ ಎಂದು ಶೀರ್ಷಿಕೆ ನೀಡಲಾಗಿದೆ.

‘‘ವರದಿಯ ಪ್ರಕಾರ, ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರದ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸಚಿನ್ ಪೈಲಟ್ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಬಂಧಿಸಲಾಯಿತು. ಪೊಲೀಸರು ಪ್ರಿಯಾಂಕಾ ಗಾಂಧಿಯನ್ನು ಬಂಧಿಸಲು ಪ್ರಯತ್ನಿಸುತ್ತಿರುವಾಗ ಅವರು ರಸ್ತೆಯಲ್ಲಿ ಕುಳಿತರು’’ ಎಂದು ಹೇಳಲಾಗಿದೆ.

CNN-News18 ಕೂಡ ಆಗಸ್ಟ್ 05, 2022 ರಂದು ಇದೇ ವೀಡಿಯೊವನ್ನು ಹಂಚಿಕೊಂಡಿದ್ದು, ‘‘ಕಾಂಗ್ರೆಸ್ ಪ್ರತಿಭಟನೆ | ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಭಟನೆಗೆ ಕುಳಿತರು’’ ಎಂಬ ಶೀರ್ಷಿಕೆ ನೀಡಲಾಗಿದೆ.

ಇಂಡಿಯಾ ಟುಡೇ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಣದುಬ್ಬರ, ಜಿಎಸ್‌ಟಿ ಮತ್ತು ಬೆಲೆ ಏರಿಕೆಯಂತಹ ವಿಷಯಗಳ ಕುರಿತು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದನ್ನು ತೋರಿಸಲಾಗಿದೆ. ಅವರು ರಾಷ್ಟ್ರಪತಿ ಭವನದ ಕಡೆಗೆ ಮೆರವಣಿಗೆ ನಡೆಸಿದರು. ಆದರೆ, ಅವರನ್ನು ದೆಹಲಿ ಪೊಲೀಸರು ಮಧ್ಯದಲ್ಲಿಯೇ ತಡೆದು ಬಂಧಿಸಲಾಯಿತು ಎಂಬ ಮಾಹಿತಿ ಇದರಲ್ಲಿದೆ.

ವೈರಲ್ ವೀಡಿಯೊಕ್ಕೆ ಹೋಲುವ ಸ್ಕ್ರೀನ್ ಶಾಟ್​ನೊಂದಿಗೆ ಹಿಂದೂಸ್ಥಾನ್ ಟೈಮ್ಸ್ ಆಗಸ್ಟ್ 05, 2022 ರಂದು ಸುದ್ದಿ ಪ್ರಕಟಿಸಿರುವುದು ಕೂಡ ನಮಗೆ ಸಿಕ್ಕಿದೆ. ಇದರಲ್ಲಿ ನೀಡಿರುವ ಮಾಹಿತಿ ಪ್ರಕಾರ, ಕಾಂಗ್ರೆಸ್ ಪಕ್ಷವು ಬೆಲೆ ಏರಿಕೆ ಮತ್ತು ಜಿಎಸ್‌ಟಿ ವಿರುದ್ಧ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿದೆ.

Priyanka Gandhi Vadra knocked down police barricades to join protest.

ಆದರೆ ಪ್ರಿಯಾಂಕಾ ಗಾಂಧಿ ವಾದ್ರಾ ರಸ್ತೆಯಲ್ಲಿ ಕುಳಿತು ಬಂಧನವನ್ನು ವಿರೋಧಿಸಿದರು. ಅಲ್ಲದೆ ವಾದ್ರಾ ಪೊಲೀಸ್ ಬ್ಯಾರಿಕೇಡ್‌ಗಳನ್ನು ಕೆಡವಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಬಳಿಕ ಅವರನ್ನೂ ಬಂಧಿಸಲಾಯಿತು. ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಂಜೀತ್ ರಂಜನ್ ಸೇರಿದಂತೆ ಹಲವಾರು ಸಂಸದರನ್ನು ಬಂಧಿಸಲಾಗಿದೆ. ಸಾಂಕೇತಿಕ ಪ್ರತಿಭಟನೆಯಾಗಿ ಅನೇಕ ಕಾಂಗ್ರೆಸ್ ಸದಸ್ಯರು ಕಪ್ಪು ಬಟ್ಟೆ ಧರಿಸಿದ್ದರು’’ ಎಂದು ಬರೆಯಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2022 ರಲ್ಲಿ ಪ್ರಿಯಾಂಕಾ ಗಾಂಧಿ ಹಣದುಬ್ಬರ ಮತ್ತು ಜಿಎಸ್‌ಟಿ ವಿರುದ್ಧ ಪ್ರತಿಭಟಿಸುತ್ತಿರುವ ಹಳೆಯ ವಿಡಿಯೋವನ್ನು ಈಗ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ಪ್ರತಿಭಟನೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿರುವ ವಿಡಿಯೋ ವಕ್ಫ್ ಮಸೂದೆಗೆ ಸಂಬಂಧಿಸಿದ್ದಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights