ಜಂತರ್ ಮಂತರ್‌ನಲ್ಲಿ ವಾಂಗ್ಚುಕ್ ಹೋರಾಟಕ್ಕೆ ಮೇನಕಾ ಗಾಂಧಿ ಬೆಂಬಲ?

ನೀಟ್  ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಯುವಜನರು ಜೂನ್ 20, 2026 ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜೂನ್ 28 ರಿಂದ ಖ್ಯಾತ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಕೂಡ ಈ ಹೋರಾಟಕ್ಕೆ ಧುಮುಕಿದ್ದು, ಆಮರಣಾಂತ ಉಪವಾಸ ಕೈಗೊಂಡಿದ್ದಾರೆ.

ಈ ಬೆನ್ನಲ್ಲೇ, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, “ಬಿಜೆಪಿ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ಜಂತರ್ ಮಂತರ್‌ಗೆ ಭೇಟಿ ನೀಡಿ ಸಿಜೆಪಿ ನೇತೃತ್ವದ ಯುವಜನರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಪ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಆಗಿರುವ ಪೋಟೊವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್‌ ಮಾಡಿದಾಗ,  ವಿಡಿಯೋದಲ್ಲಿರುವ ಮಹಿಳೆ ಬಿಜೆಪಿ ನಾಯಕಿ ಮನೇಕಾ ಗಾಂಧಿ ಅಲ್ಲ, ಬದಲಿಗೆ ಅವರ ಸಹೋದರಿ ಅಂಬಿಕಾ ಶುಕ್ಲಾ. ಅಂಬಿಕಾ ಶುಕ್ಲಾ ಅವರು ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿರುವುದು ನಿಜ. ಆದರೆ, ಸ್ವತಃ ಮನೇಕಾ ಗಾಂಧಿ ಅವರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ ಅಥವಾ ಬೆಂಬಲಿಸಿದ್ದಾರೆ ಎಂಬುದಕ್ಕೆ ಯಾವುದೇ ಅಧಿಕೃತ ಸಾಕ್ಷ್ಯಗಳಿಲ್ಲ. ಹಾಗಾಗಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ವಾಸ್ತವವಾಗಿ ಬಿಜೆಪಿ ನಾಯಕಿ ಮನೇಕಾ ಗಾಂಧಿ ಅವರು ಜಂತರ್ ಮಂತರ್‌ನ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಅಥವಾ ಬೆಂಬಲ ಘೋಷಿಸಿದ್ದಾರೆ ಎಂಬ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳು ಲಭ್ಯವಾಗಿಲ್ಲ. ಹಲವು ಪ್ರಮುಖ ಸುದ್ದಿ ಸಂಸ್ಥೆಗಳ ವರದಿಗಳ ಪ್ರಕಾರ, ಮನೇಕಾ ಗಾಂಧಿ ಅವರ ಸಹೋದರಿ ಅಂಬಿಕಾ ಶುಕ್ಲಾ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರಾಣಿ ಕಲ್ಯಾಣ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಅಂಬಿಕಾ ಶುಕ್ಲಾ ಅವರು, ಪರೀಕ್ಷಾ ಅಕ್ರಮ, ನಿರುದ್ಯೋಗ ಮತ್ತು ಆಡಳಿತಾತ್ಮಕ ವೈಫಲ್ಯಗಳ ವಿರುದ್ಧ ಯುವಜನರು ನಡೆಸುತ್ತಿರುವ ಈ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದರು. ಮನೇಕಾ ಗಾಂಧಿ ಅವರ ಕುಟುಂಬಕ್ಕೆ ಹತ್ತಿರದವರಾಗಿರುವ ಕಾರಣದಿಂದ ಅವರ ಭೇಟಿ ಮಾಧ್ಯಮಗಳ ಗಮನ ಸೆಳೆದಿತ್ತು.

ಅಂಬಿಕಾ ಶುಕ್ಲಾ ಅವರ ಸೋಷಿಯಲ್ ಮೀಡಿಯಾ ಪೋಸ್ಟ್:

ಜುಲೈ 14, 2026 ರಂದು ಅಂಬಿಕಾ ಶುಕ್ಲಾ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಇದೇ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಜಂತರ್ ಮಂತರ್‌ನಲ್ಲಿ ನೆರೆದಿದ್ದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಾಣಿ ಕಲ್ಯಾಣದ ಕುರಿತು ಜಾಗೃತಿ ಮೂಡಿಸಿರುವುದಾಗಿ ತಿಳಿಸಿದ್ದಾರೆ. ಯುವ ಪ್ರತಿಭಟನಾಕಾರರು ಪ್ರಾಣಿಗಳ ಮೇಲೂ ಕರುಣೆ ತೋರಬೇಕು ಎಂಬ ತಮ್ಮ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಕ್ಕಾಗಿ ಅವರು ಯುವಜನರನ್ನು ಶ್ಲಾಘಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಜಂತರ್ ಮಂತರ್ ಪ್ರತಿಭಟನೆಯ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಬಿಜೆಪಿ ನಾಯಕಿ ಮನೇಕಾ ಗಾಂಧಿ ಅವರ ಸಹೋದರಿ ಅಂಬಿಕಾ ಶುಕ್ಲಾ ಅವರಾಗಿದ್ದಾರೆ. ಮನೇಕಾ ಗಾಂಧಿ ಅವರಿಗೂ ಈ ಪ್ರತಿಭಟನೆಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights